ಮೈಸೂರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ

ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್‌ ಕುಮಾರ್‌, ಶ್ರೇಯಸ್‌ ಹಾಗೂ ಶಿವಪುರದ ಪ್ರವೀಣ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ಬಳಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೈಬರ್‌ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 6.30 ಲಕ್ಷ ಮೌಲ್ಯದ 21 ಕೆಜಿ ಗಾಂಜಾ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಮೂವರು ಬಂಧಿತರನ್ನು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ಒಡಿಶಾದಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಬಳಿಕವೇ ಇನ್ನೂ ಹೆಚ್ಚಿನ ಸತ್ಯಾಸತ್ಯತೆ ಹೊರಬರಲಿದೆ.