ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ.
ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ ವಾಪಸ್ ಬರುತ್ತಿದ್ದಾಗ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಗೌತಮ್ ತೀವ್ರವಾಗಿ ಗಾಯಗೊಂಡರು. ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದರು. ನಂತರ ಜಿಲ್ಲಾಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





