ಹುಣಸೂರು: ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ನಿಲುಗಡೆ ವಿಚಾರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ಕಿರಿಕ್ ಆಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಣಸೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹುಣಸೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ರಾಜಾರೋಷವಾಗಿ ವಾಹನಗಳನ್ನು ನಿಲ್ಲಿಸಿ ಬಸ್‌ಗಳ ಓಡಾಟಕ್ಕೆ ತೊಂದರೆ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಬ್ಬರು ವಾಹನ ನಿಲ್ಲಿಸದಂತೆ ಸಾರ್ವಜನಿಕರೊಬ್ಬರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಗಲಾಟೆಯಲ್ಲಿ ಇಬ್ಬರಿಗೂ ಗಾಯವಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಚಿಕಿತ್ಸೆ ಪಡೆಯುವಂತೆ ಇಬ್ಬರನ್ನೂ ಆಸ್ಪತ್ರೆಗೆ ಕಳಿಸಿದ್ದಾರೆ.




