ಮೈಸೂರು : ರಾಷ್ಟ್ರಪತಿಗಳಿಗೆ ಆಹ್ವಾನ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಭಾನುವಾರ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮೈದಾನದಲ್ಲಿ ನಡೆಯಲಿರುವ ನಿರ್ಮಾಪಕ ಎಸ್.ಸಂದೇಶ್ ನಾಗರಾಜು ಅವರ ೮೦ನೇ ವರ್ಷದ ಜನ್ಮದಿನ ಆಚರಣೆ ಮಹೋತ್ಸವದಲ್ಲಿ ಭಾಗವಹಿಸುವರು. ಸಂಜೆ ೪ಕ್ಕೆ ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿರುವ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಾಪಸ್ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ಬೆಳಿಗ್ಗೆ ಮೈಸೂರಿನಿಂದ ಸಿದ್ದರಾಮನಹುಂಡಿ ಗ್ರಾಮಕ್ಕೆ ಹೊರಟು ೧೧ಕ್ಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿರುವ ಪಿಎಂಶ್ರೀ-ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ೩.೧೦ಕ್ಕೆ, ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳಲಿದ್ದಾರೆ. ಸಂಜೆ ೪ಕ್ಕೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮೈಸೂರಿನಲ್ಲಿ ವಾಸ್ತವ್ಯ ಹೂಡುವ ಅವರು ಮಂಗಳವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ಬೀಳ್ಕೊಡಲಿದ್ದಾರೆ. ಮಧ್ಯಾಹ್ನ ೧೨ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.





