ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೭,೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವವನ್ನು ಜ.೧೮ರಂದು ಆಯೋಜಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ, ಈ ಬಾರಿ ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ, ಸಂಗೀತ ನಿರ್ದೇಶಕ ಸಾಧು ಕೋಕಿಲ ಸೇರಿದಂತೆ ೯ ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ. ಮೂರು ವರ್ಷಗಳ ಅವಧಿಯ ಘಟಿಕೋತ್ಸವವು ಒಂದೇ ಬಾರಿಗೆ ನಡೆಯುತ್ತಿದ್ದು, ಕರ್ನಾಟಕ ವಿವಿ ಕಾಯ್ದೆ ಪ್ರಕಾರ ತಲಾ ಮೂವರಂತೆ ಒಂಬತ್ತು ಮಂದಿಗೆ ಗೌರವ ಡಾಕ್ಟರೇಟ್, ೫೪೦ ಅಭ್ಯರ್ಥಿಗಳಿಗೆ ಸ್ನಾತಕ-ಸ್ನಾತಕೋತ್ತರ ಪದವಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಶನಿವಾರ ಮಧ್ಯಾಹ್ನ ೩ ಗಂಟೆಗೆ ನಡೆಯಲಿರುವ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕೇಂದ್ರೀಯ ಸಂಸ್ಕೃತ ವಿವಿ ಕುಲಪತಿ ಪ್ರೊ.ಶ್ರೀನಿವಾಸ ವರಖೇಡಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕುಲಸಚಿವರಾದ ಕೆ.ಎಸ್.ರೇಖಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಬಿ.ಮಂಜುನಾಥ್ ಹಾಗೂ ಪ್ರಶಾಸನ ಮಂಡಳಿ ಹಾಗೂ ಪ್ರಶಿಕ್ಷಣ ಪರಿಷತ್ತಿನ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.