ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ.
ಇನ್ನೂ ಕರ್ನಾಟಕದಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಡಿ.1 ರಿಂದ ಭಾರಿ ಮಳೆಯಾಗುವ ಮುನ್ನೂಚನೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
ಡಿ.1ಕ್ಕೆ ಬೆಂಗಳೂರು, ಮೈಸೂರು, ತುಮಕೂರು, ರಾಮನಗರ, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಚ್ ಅಲರ್ಟ್ ಘೋಷಿಸಲಾಗಿದೆ.
ಡಿ.2 ಮತ್ತು 3ಕ್ಕೆ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿಯೂ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.