ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿ ಗಂಭೀರವಾಗಿ ಗಾಯಗೊಂಡು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಹಿಳೆ ಮಂಜುಳಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನೆನ್ನೆ ತಡ ರಾತ್ರಿ ಅರಮನೆಯ ಜಯಮಾರ್ತಾಂಡ ಗೇಟ್ ಸಮೀಪ ನಡೆದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟದಲ್ಲಿ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಹಿನ್ನೆಲೆಯಲ್ಲಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಮಂಜುಳಾ ಮೂಲತಃ ನಂಜನಗೂಡು ನಿವಾಸಿಯಾಗಿದ್ದು, ಹೂವಿನ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ. ಈ ಸ್ಫೋಟದಲ್ಲಿ ಈಗಾಗಲೇ ಬಲೂನ್ ವ್ಯಾಪಾರಿ ಸಲೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುಳಾ ಸಾವಿನೊಂದಿಗೆ ಈ ಗ್ಯಾಸ್ ಬ್ಲಾಸ್ಟ್ ದುರಂತದಲ್ಲಿ ಒಟ್ಟು ಇಬ್ಬರು ಪ್ರಾಣ ಕಳೆದುಕೊಂಡಂತಾಗಿದೆ.
ಘಟನೆಗೆ ಸಂಬಂಧಿಸಿ ಇನ್ನೂ ಕೆಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.





