ಮೈಸೂರು : ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, 3493 ಜನರಿಗೆ ಪರೀಕ್ಷೆ ನಡೆಸಿದ್ದು ಇದರಲ್ಲಿ 481 ಜನರಿಗೆ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು 14% ಪ್ರಕರಣಗಳು ಕಂಡು ಬಂದಿವೆ. ಫೆಬ್ರವರಿ ಮಾರ್ಚ್ ಏಪ್ರಿಲ್ ನಲ್ಲಿ 18% ಇದ್ದು ಈಗ 11% ಗೆ ಡೆಂಗ್ಯೂ ಪ್ರಕರಣಗಳು ಇಳಿದಿವೆ ಎಂದು ತಿಳಿಸಿದರು.
ಅಲ್ಲದೆ ನಮ್ಮಲ್ಲಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣದಲ್ಲಿ ಇವೆ. ಇದು ಹೆಚ್ಚಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ. ಡೆಂಗ್ಯೂ ಸೊಳ್ಳೆಗಳ ಕಡಿತದಿಂದ ಬರುತ್ತದೆ. ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿ ಆಗುತ್ತವೆ. ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಜನರಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಪ್ರಕರಣಗಳು ಕಂಡುಬಂದರೆ ಮಾಹಿತಿ ನೀಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಚಿಕಿತ್ಸೆಗೆ ನಿಗದಿತ ದರವನ್ನು ಮಾತ್ರ ವಿಧಿಸಬೇಕು. ಹೆಚ್ಚಿನ ದರ ಪಡೆದರೆ ಸಂಬಂಧಿಸಿದ ಆಸ್ಪತ್ರೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.