ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಸ್ವಚ್ಛತೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿ, ಹೆರಿಗೆ ಕೊಠಡಿ, ಪ್ರಯೋಗ ಶಾಲೆ, ಪ್ರಸಕ್ತ ಮಾಹಿತಿಯಲ್ಲಿ ಹೆರಿಗೆ ಆಗಿರುವ ಬಗ್ಗೆ ದಾಖಲಾತಿಗಳು, ಎಲ್ಲ ರಾಷ್ಟ್ರೀಯ ಕಾರ್ಯಕ್ರಮಗಳ ದಾಖಲಾತಿ ಪುಸ್ತಕಗಳನ್ನು ಪರಿಶೀಲನೆ ನಡೆಸಿದರು.
ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರನ್ನು ಕರೆಸಿ ಈ ಆರೋಗ್ಯ ಕೇಂದ್ರಕ್ಕೆ ಈ ಭಾಗದಿಂದ ಹೆಚ್ಚು ಜನರು ಬರುತ್ತಿದ್ದು, ಹೆರಿಗೆಗೆ ಬರುವವರ ಮೇಲೆ ತೀವ್ರ ನಿಗಾ ಇಡಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕು. ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ಪ್ರಗತಿಯನ್ನು ಸಾಧಿಸಬೇಕು. ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಹಾಕಬೇಕು. ಮುಂದಿನ ದಿನಗಳಲ್ಲಿ ಯಾವುದೇ ದೂರುಗಳು ಬರದ ಹಾಗೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಾಳೆಯಿಂದ ಉದ್ಘಾಟನೆ ಆಗಲಿರುವ ಗೃಹ ಆರೋಗ್ಯ ಕಾರ್ಯಕ್ರಮವನ್ನು ಚೆನ್ನಾಗಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾಆಶಿತ್ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.





