ಮೈಸೂರು: ಚನ್ನಪಟ್ಟಣದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಈಗ ಜಿದ್ದಾಜಿದ್ದಿನ ಕಣವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಚನ್ನಪಟ್ಟಣ ಕ್ಷೇತ್ರವನ್ನು ಗೆಲ್ಲಲೇಬೇಕು ಎಂದು ಪಣತೊಟ್ಟಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಡುವೆ ಚನ್ನಪಟ್ಟಣ ಕ್ಷೇತ್ರದಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಜಿ.ಟಿ.ದೇವೇಗೌಡ ಅವರು ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಸ್ಪರ್ಧಿಸಲ್ಲ. ನಾನು ನನಗಿರುವ ರಾಜಕೀಯದ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ. ಡಿಕೆಶಿ ಮಾತಿನಲ್ಲಿ ರಾಜಕೀಯ ತಂತ್ರಗಾರಿಕೆ ಅಡಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಫೈಟ್ ಇರಲಿದ್ದು, ಈ ಚುನಾವಣೆ ಸರ್ಕಾರದ ಪರ ಇರಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ಇರಲಿದೆ. ನಾವು ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್ ಮಾಡಿಲ್ಲ ಎಂದರು.





