ಸರಗೂರು: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ಪಟ್ಟಣದ ಬಳಿ ನಡೆದಿದೆ.
ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸಿ ವಾಹನ ಕಬಿನಿ ನದಿ ಚಾನೆಲ್ ಬಳಿ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಮೂರು ಬಾರಿ ಪಲ್ಟಿಯಾಗಿದೆ.
ಘಟನೆಯಲ್ಲಿ ಚಾಲಕ ಸೇರಿ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೆಚ್.ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಸರಗೂರು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.





