ಮೈಸೂರು

ದಸರೆಗೂ ಆನೆಗೂ ಅವಿನಾಭಾವ ಸಂಬಂಧ: ಈಶ್ವರ ಖಂಡ್ರೆ

ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ 9 ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವರಾದ ವೆಂಕಟೇಶ್ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಾಡಿನಿಂದ ನಾಡಿಗೆ ಆನೆಗಳ ಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಾಡಿನಿಂದ ನಾಡಿನತ್ತ ಕಳುಹಿಸುವುದು ಹಿಂದಿನಿಂದ ಅನೂಚಾನವಾಗಿ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದ್ದು, ಆಶ್ವಯುಜ ಶುದ್ಧ ದಶಮಿಯ ದಿನ ನಡೆಯುವ ಜಂಬೂಸವಾರಿ ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿದೆ. ಇದನ್ನು ನೋಡಲು ದೇಶ ವಿದೇಶಗಳಿಂದಲೂ ಜನರು ಆಗಮಿಸುತ್ತಿರುವುದೇ ಇದರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

ಈ ಬಾರಿಯೂ 58 ವರ್ಷ ವಯಸ್ಸಿನ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ವಿರಾಜಮಾನರಾದ ಚಿನ್ನದ ಅಂಬಾರಿ ಹೊರಲಿದ್ದಾನೆ, ಕಳೆದ ವರ್ಷ ನಿಶಾನೆ ಆನೆಯಾಗಿದ್ದ ಅರ್ಜುನ ಈ ಬಾರಿ ನಮ್ಮೊಂದಿಗಿಲ್ಲ ಎಂಬ ನೋವು ನಮಗಿದೆ. ಕಳೆದ ತಿಂಗಳು ನಾನು ಅರ್ಜುನ ಕಾಡಾನೆಯೊಂದಿಗೆ ಹೋರಾಡಿ ಮಡಿದ ಹಾಸನ ಜಿಲ್ಲೆ, ಯಸಳೂರು ಬಳಿ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಅರ್ಜುನ ಆನೆ ಇದ್ದ ಆನೆ ಶಿಬಿರ ಬಳ್ಳೆಯಲ್ಲಿ ಕೂಡ ಒಂದು ಸ್ಮಾರಕ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

ಹಿಂದೆ ಮೈಸೂರಿನ ಅಂದಿನ ಮಹಾರಾಜರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಮತ್ತು ಆಸ್ಥಾನದವರು ಎಚ್.ಡಿ.ಕೋಟೆ ತಾಲೂಕು ಅಂತರ ಸಂತೆ ಬಳಿಯ ಮಾಸ್ತಿ ಗುಡಿ ಮತ್ತು ಮಾಸ್ತಮ್ಮನ ದೇವಸ್ಥಾನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿದ ತರುವಾಯ ಸಾಂಪ್ರದಾಯಿಕವಾಗಿ ಗಜ ಪಯಣ ಆರಂಭವಾಗುತ್ತಿತ್ತು ಎಂದು ನನಗೆ ತಿಳಿಸಲಾಗಿದೆ.

ಆಗ ಆನೆಗಳು ನಡೆದುಕೊಂಡು ಹೋಗುತ್ತಿದ್ದ ಮಾರ್ಗದ ಹಳ್ಳಿ ಹಳ್ಳಿಯಲ್ಲೂ ಜನರು ತಳಿರು ತೋರಣ ಕಟ್ಟಿ, ರಂಗವಲ್ಲಿ ಹಾಕಿ, ಆನೆಗಳಿಗೆ, ಬಾಳೆಹಣ್ಣು, ಅಕ್ಕಿ, ಬೆಲ್ಲ ಕೊಟ್ಟು ಪೂಜಿಸುತ್ತಿದ್ದರು. ಆನೆಗಳು, ಮಾವುತರು, ಕವಾಡಿಗರ ಇಡೀ ಕುಟುಂಬ ಕಾಲ್ನಡಿಗೆಯಲ್ಲಿ ಮೈಸೂರಿಗೆ ಬರುತ್ತಿತ್ತು ಎಂದು ಕೇಳಿದ್ದೇನೆ. ಈಗ ಸಾಂಕೇತಿಕವಾಗಿ ಇಲ್ಲಿ ಆನೆಗಳು ಮತ್ತು ಮಾವುತರು ಸ್ವಲ್ಪ ದೂರ ಮಾತ್ರ ಹೆಜ್ಜೆ ಹಾಕಿದ ತರುವಾಯ ಲಾರಿಗಳಲ್ಲಿ ಆನೆಗಳನ್ನು ಮೈಸೂರಿಗೆ ಕಳುಹಿಸಲಾಗುತ್ತದೆ. ಆದರೂ ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಎಲ್ಲ ರೀತಿಯ ವಿಧಿ ವಿಧಾನ ನಡೆಸಿಕೊಂಡು ಬರುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.

ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಲು ಮತ್ತು ಹೆಚ್ಚುವರಿಯಾಗಿ ಆನೆಗಳನ್ನು ಕಾಯ್ದಿರಿಸಲೂ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು. ದಸರಾ ಮಹೋತ್ಸವ ಯಶಸ್ವಿಯಾಗಿ, ವಿಜೃಂಭಣೆಯಿಂದ ನೆರವೇರಲಿ. ಅಧಿದೇವತೆ ನಾಡದೇವಿ ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದ ರಾಜ್ಯದ ಮೇಲೆ ಇರಲಿ. ಉತ್ತಮ ಮಳೆ ಬೆಳೆ ಆಗಲಿ. ರಾಜ್ಯದಲ್ಲಿ ಸುಖ, ಸಮೃದ್ಧಿ ನೆಲೆಸಲಿ ಎಂದು ಈ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಸ್ತೀಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…

6 mins ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

28 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

53 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

2 hours ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago