Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ವಿದ್ಯುತ್ ದರ ಏರಿಕೆ : ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದು ಪ್ರಮುಖವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯ ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ದರ ಏರಿಕೆ ಆದೇಶವನ್ನ ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

ವಿದುತ್ ದರ ಏರಿಕೆ ಹಿನ್ನೆಲೆಯಲ್ಲಿ ಜನ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿರುವ ತನ್ವೀರ್ ಸೇಠ್, ಸರ್ಕಾರ ಈ ವಿಚಾರದತ್ತ ಗಮನ ಹರಿಸಲು ಕೋರಿಕೊಂಡಿದ್ದಾರೆ. ಅವರ ಪತ್ರದ ಸಾರಾಂಶ ಈ ಕೆಳಗಿನಂತಿದೆ.
ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇದರ ವಿರುದ್ಧ ರಾಜ್ಯದ ಜನ ಹೈರಾಣಾಗಿ ಸರ್ಕಾರ ಮತ್ತು ಎಸ್ಕಾಂಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ.

ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಮರು ಪರಿಶೀಲನೆ ಮಾಡಿ, ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಪರಿಶೀಲಿಸಿ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಮರು ಜಾರಿಗೊಳಿಸಿ ಎಂದು ಕೇಳಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!