ಸರಗೂರು: ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ನೀರು ಹಾಯಿಸಲು ಹೋದ ಯುವಕನ ಮೇಲೆ ಐದು ಆನೆಗಳು ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಗದ್ದೆಹಳ್ಳ ಗ್ರಾಮದ ಬಳಿ ನಡೆದಿದೆ.
ಗದ್ದೆಹಳ್ಳ ಗ್ರಾಮದ 24 ವರ್ಷದ ಅವಿನಾಶ್ ಎಂಬುವವನೇ ಆನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಇಂದು ಬೆಳಿಗ್ಗೆ ಜಮೀನಿನಲ್ಲಿ ಮೋಟಾರ್ ಆನ್ ಮಾಡಲು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಯುವಕನ ಸಾವಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇನ್ನು ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಈ ಭಾಗದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.