ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘಟನೆ ಸದಸ್ಯರು ಉಳಿಸಿ ಉಳಿಸಿ ಕಬಿನಿ ಜಲಾಶಯವನ್ನು ಉಳಿಸಿ ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ ಬಂಡೀಪುರ ಅರಣ್ಯದಲ್ಲಿ ಕಾನೂನು ನಿಯಮಗಳನ್ನು ಮೀರಿ ಅಕ್ರಮವಾಗಿ ನಿರ್ಮಾಣವಾಗುತ್ತಿರುವ ರೆಸಾರ್ಟ್‌ಗಳು, ಕಟ್ಟಡಗಳು ಹಾಗೂ ವಾಣಿಜ್ಯ ಚಟುವಟಿಕೆಗಳನ್ನು ನಿಲ್ಲಿಸಬೇಕು. ಇದರಿಂದ ಪಕ್ಕದಲ್ಲೇ ಇರುವ ಕಬಿನಿ ಜಲಾಶಯಕ್ಕೆ ತೀವ್ರ ಹಾನಿಯಾಗುತ್ತದೆ. ಜಲಾಶಯಕ್ಕೆ ಹಾನಿಯಾದರೆ ಮುಂದಿನ ದಿನಗಳಲ್ಲಿ ಎಲ್ಲರೂ ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹೀಗಾಗಿ ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಿ ಕಬಿನಿ ಜಲಾಶಯದ ಉಳಿವಿಗೆ ಶ್ರಮ ವಹಿಸಬೇಕು ಎಂದು ಆಗ್ರಹಿಸಿದರು.





