ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ.
ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಹಾಗೂ ನಿರ್ವಾಹಕರಿಬ್ಬರು, ಪ್ರಯಾಣಿಕರನ್ನು ಕೆಳಗಿಳಿಸಿ ಮುಂದೆ ಆಗುಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.
ಬಸ್‌ನಲ್ಲಿ ಸುಮಾರು 15ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.