ಬೆಂಗಳೂರು : ಮುಡಾ ಹಗರಣ ಸಂಬಂಧ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಿನೇಶ್‌ಕುಮಾರ್ ಅವರನ್ನು ಬಂಧಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಕಾನೂನಿನ ಸಂಕಷ್ಟ ತಂದೊಡ್ಡಿದ್ದ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ತನಿಖೆ ನಡೆಸುತ್ತಿದ್ದ ಇಡಿ ಮಂಗಳವಾರ ವಿಚಾರಣೆಗೆ ಸಮನ್ಸ್ ನೀಡಿತ್ತು. ಬೆಳಿಗ್ಗೆಯಿಂದ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದರು.
ಇದಕ್ಕೂ ಮುನ್ನ ಹಗರಣದ ಪ್ರಮಖ ರೂವಾರಿ ಎಂದೇ ಹೇಳಲಾಗಿರುವ ದಿನೇಶ್‌ಕುಮಾರ್ ಮತ್ತು ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ವಿರುದ್ದ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಲೋಕಾಯುಕ್ತ ತನಿಖಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.





