ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೂಕ್ತ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಶೀಘ್ರದಲ್ಲಿಯೇ ಗೃಹ ಆರೋಗ್ಯ ಯೋಜನೆ ಅನುಷ್ಠಾನಗೊಳಿಸುತ್ತಿದೆ.
30 ವರ್ಷ ಮೇಲ್ಪಟ್ಟ ಜನರ ಮನೆ ಬಾಗಿಲಿಗೆ ಈ ಯೋಜನೆ ಅನ್ವಯಿಸಲಿದ್ದು, ಸಮಗ್ರ ತಪಾಸಣೆ, ನಿರ್ವಹಣೆ ಮತ್ತು ಔಷಧ ವಿತರಣೆ ಸೇವೆ ತಲುಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಗಾಗಿಯೇ ಈಗಾಗಲೇ ಜಿಲ್ಲೆಯ ಪ್ರತೀ ಹಳ್ಳಿಗಳಿಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, 30 ವರ್ಷ ಮೇಲ್ಪಟ್ಟ ಜನರನ್ನು ಪರೀಕ್ಷೆಗೆ ಒಳಪಡಿಸಿದೆ.
ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿದ್ದು, ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿರುವವರಿಗೆ ಔಷಧ ವಿತರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಮನೆ ಮನೆಗೆ ಭೇಟಿ ನೀಡಲಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಯಿಲೆಗಳಿಗೆ ತಕ್ಕಂತೆ ಸೇವಿಸಬೇಕಾದ ಆಹಾರ ಕ್ರಮ, ವ್ಯಾಯಾಮ ಸೇರಿದಂತೆ ಒಟ್ಟಾಗಿ ಕಾಯಿಲೆಯನ್ನು ಹೇಗೆ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದರ ಜೊತೆ ಜೊತೆಗೆ ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಜಾಗೃತಿಯನ್ನು ಸಹ ಮೂಡಿಸಲಾಗುತ್ತದೆ.





