ಮೈಸೂರು : ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ದೊರೆಯಬೇಕು. ಸಮಾಜದಲ್ಲಿ ಇರುವ ಆರ್ಥಿಕ ಅಸಮಾನತೆಯನ್ನು ಹೋಗಳಾಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಕ್ರಮ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ವರುಣಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ರೂ.1107.72 ಕೋಟಿ ಮೌಲ್ಯದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ವರುಣಾ ಕ್ಷೇತ್ರದಲ್ಲಿ 1107.72 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ಯಾವುದೇ ಜಾತಿ ಧರ್ಮವನ್ನು ಪರಿಗಣಿಸದೆ ಎಲ್ಲಾ ಜಾತಿಯ ಬಡವರು, ರೈತರು, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ನಾನು 1983 ರಲ್ಲಿ ಮೊದಲ ಬಾರಿ ಪಕ್ಷೇತರನಾಗಿ ಗೆದ್ದು ಶಾಸಕನಾಗಿ, ಅದೇ ವರ್ಷ ಸಚಿವನಾದೆ. ನಾನು ಸಚಿವನಾಗಿ 41 ವರ್ಷಗಳಾಗಿವೆ. ನಾನು 5 ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದಿದ್ದೇನೆ. ಅವರಿಗೂ ನನ್ನ ಧನ್ಯವಾದಗಳು. 2 ಬಾರಿ ವರುಣಾ ಕ್ಷೇತ್ರದಲ್ಲಿ ಗೆದ್ದಿದ್ದೇನೆ. ವರುಣಾ ಕ್ಷೇತ್ರದಲ್ಲಿ ಗೆದ್ದ ಎರಡು ಬಾರಿಯೂ ಮುಖ್ಯಮಂತ್ರಿ ಆಗಿದ್ದೇನೆ. ಇದಕ್ಕೆ ನಾನು ವರುಣಾ ಕ್ಷೇತ್ರದ ಜನತೆಗೆ ಚಿರ ಋಣಿಯಾಗಿರುತ್ತೇನೆ ಎಂದರು.
ನಾನು 2013 ರಲ್ಲಿ ಚುನಾವಣಾ ಸಂಧರ್ಭದಲ್ಲಿ 163 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ರೈತರ ಬಡವರ ಪರ ಶೋಷಿತರ ಪರ ಕೆಲಸ ಮಾಡಿದ್ದೇವೆ. 2023 ರ ಚುನಾವಣಾ ಸಂಧರ್ಭದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವನಿಧಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ಬಡವರ ಏಳಿಗೆಗೆ ಆರ್ಥಿಕ ಅಸಮಾನತೆ ಹೋಗಲಾಡಿಸಲು ಕ್ರಮ ವಹಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 55 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಕರ್ನಾಟಕದ ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿ ಇದೆ. ಗ್ಯಾರೆಂಟಿ ಯೋಜನೆಗಳಿಂದ ಜನರ ಕೈಗೆ ಹಣ ಸಿಕ್ಕಿ ಆರ್ಥಿಕ ಚಟುವಟಿಕೆಗಳು ಹೆಚ್ಚಾದವು. ಇದರಿಂದ ತಲಾ ಆದಾಯ ಹೆಚ್ಚಾಗಿದೆ. ಜಿ ಎಸ್ ಟಿ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿ ಇದೆ. ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ನಾವು 2023 ರ ಚುನಾವಣೆಗೆ ಮೊದಲು 542 ಭರವಸೆಗಳನ್ನು ನೀಡಿದ್ದೆವು. ಅದರಲ್ಲಿ 242 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮದು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಮಾತನಾಡಿ, ವರುಣಾ ವಿಧಾನ ಸಭಾ ಕ್ಷೇತ್ರದ ಜನತೆ ರಾಜ್ಯಕ್ಕೆ ಜನಪ್ರಿಯ ಮುಖ್ಯಮಂತ್ರಿಗಳನ್ನು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಈ ಕ್ಷೇತ್ರದಲ್ಲಿ ಗೆದ್ದು 2 ಬಾರಿ ಮುಖ್ಯಮಂತ್ರಿಗಳಾಗಿದ್ದಾರೆ. ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ನಾನು ಸಹ ವರುಣಾ ಕ್ಷೇತ್ರದ ಮತದಾರ. ಇಲ್ಲಿನ ಅಭಿವೃದ್ಧಿ ಬಗ್ಗೆ ಕಣ್ಣಾರೆ ಕಂಡಿದ್ದೇನೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಇಂದು ವರುಣಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1107.72 ಕೋಟಿ ರೂಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಾಗಿದೆ. ಇದು ಒಂದು ಸುವರ್ಣ ಸಂಧರ್ಭ. ಇದು ನಮ್ಮ ಕ್ಷೇತ್ರ ನಮ್ಮ ಮನೆ. ನಮ್ಮ ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ನಾವು ಬಡವರಿಗಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅಲ್ಲದೆ ಅಭಿವೃದ್ಧಿ ಕಾಮಗಾರಿಗಳಿಗೂ ಹಣ ನೀಡಲಾಗುತ್ತದೆ. ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂಬುದನ್ನು ತೋರಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ತಲಾ ಆದಾಯ ದೇಶದಲ್ಲೇ ಪ್ರಥಮ ಸ್ಥಾನದಲ್ಲಿ ಇದೆ. ಇದಕ್ಕೆ ನಮ್ಮ ಗ್ಯಾರೆಂಟಿ ಯೋಜನೆಗಳೇ ಕಾರಣ. ಗ್ಯಾರೆಂಟಿ ಯೋಜನೆಗಳಿಂದ ಜನರು ಹೆಚ್ಚು ಹಣ ಜನರ ಕೈ ಸೇರುತ್ತಿದೆ. ವಾರ್ಷಿಕ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಖರ್ಚು ಮಾಡಲಾಗುತ್ತಿದೆ. ಇದರಿಂದ ಹಣ ಇಲ್ಲದ ಬಡವರಿಗೆ ಹಣ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ನಾವು ಚುನಾವಣೆ ಸಂಧರ್ಭದಲ್ಲಿ ನೀಡಿದ್ದ ಭರವಸೆಯಂತೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ, ರೇಷ್ಮೆ ಹಾಗೂ ಪಶು ಸಂಗೋಪನೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್, ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ, ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ ಕೆ ತಿಮ್ಮಯ್ಯ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಹದಿನಾರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಣ್ಣ ತಾಯಮ್ಮ ಅವರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.





