Mysore
27
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ʼಗ್ಯಾರಂಟಿʼ ನಡಿಗೆ ʼಹಾಡಿʼ ಕಡೆಗೆ : ಹಾಡಿ ಜನರಿಗೆ ಸರ್ಕಾರದ ಸೌಲಭ್ಯ ದೊರಕಿಸಲು ವಿನೂತನ ಪ್ರಯತ್ನ

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನವನ್ನು ಆಯೋಜಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ದೇವರಾಜ ಅರಸು ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಕೆಲವು ಆದಿವಾಸಿಗಳು ಮುಂದೆ ಬಂದಿಲ್ಲ. ಅಂತಹವರನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಸೇವೆ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಕೋರಿದರು.

ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಪ್ರೊ.ಶಿವಕುಮಾರ್ ಮಾತನಾಡಿ, ಕಳೆದ ಸಭೆಯಲ್ಲಿ ಅಧಿಕಾರಿಗಳು ನೀಡಿದ ವರದಿಯ ಪ್ರಕಾರ ೧,೦೨೬ ಆದಿವಾಸಿಗಳು ನೋಂದಣಿ ಆಗಿರಲಿಲ್ಲ. ಈ ಪೈಕಿ ಕೇವಲ ೧೬ ಜನರನ್ನು ಮಾತ್ರ ನೋಂದಣಿ ಮಾಡಲಾಗಿದ್ದು, ಇನ್ನೂ ೧,೦೧೦ ಆದಿವಾಸಿಗಳ ನೋಂದಣಿ ಬಾಕಿ ಇದೆ. ಆದಿವಾಸಿಗಳಿಗೆ ಸೌಲಭ್ಯ ತಲುಪಿಸುವ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಸರಿಯಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಜತೆಗೆ ಐಟಿಡಿಪಿ ಅಧಿಕಾರಿಗಳೂ ಜವಾಬ್ದಾರಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಽಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಆದಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಆದಿವಾಸಿಗಳಿಗೆ ಸೌಲಭ್ಯ ತಲುಪಿಸುವ ವಿಚಾರದಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಐಟಿಡಿಪಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಲಾಗುವುದು ಎಂದರು.

ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷ ಹುಣಸೂರು ಬಸವಣ್ಣ, ಚಂದ್ರಶೇಖರ್, ಸದಸ್ಯರಾದ ಸಾ.ಮಾ. ಯೋಗೀಶ್, ಉದಯಶಂಕರ್, ಮಹದೇವು, ಉತ್ತನಹಳ್ಳಿ ಶಿವಣ್ಣ ಹಾಗೂ ಇತರರು ಉಪಸ್ಥಿತರಿದ್ದರು.

Tags:
error: Content is protected !!