ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ.
ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ.
ಇನ್ನೂ ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಬಾಲು ಎಂಬುವವರ ಜಮೀನಿನಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.
ಹಸುವಿನ ಮೇಲೆ ದಾಳಿ ನಡೆಸಿದ ಹುಲಿಯು ಜಮೀನೊಂದರಲ್ಲಿ ಆಶ್ರಯ ಪಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದಾರೆ.
ಎಚ್.ಡಿ.ಕೋಟೆ ಪಟ್ಟಣದಲ್ಲೇ ವಾಸ್ತವ್ಯ ಹೂಡಿರುವ ಹುಲಿಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕೂ ಮುಂಚೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.





