ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ದೂರಿದರು.
ಈ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಕ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.
೪೦ ವರ್ಷಗಳ ಹಿಂದೆ ನಾನು ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿದ್ದಾಗ ಕಷ್ಟಪಟ್ಟು ಸಂಪಾದನೆ ಮಾಡಿದ ಜಮೀನು ಅದಾಗಿದೆ. ೧೪ ಎಕರೆ ಒತ್ತುವರಿಯಾಗಿದೆ ಎಂದು ಆರೋಪ ಮಾಡಿದ್ದಾರೆ. ನಾನು ಹಿಂದೆಯೇ ಅವರಿಗೆ ಪತ್ರ ಬರೆದು, ಸರ್ವೇ ಮಾಡಿಕೊಳ್ಳಿ, ಒತ್ತುವರಿ ಆಗಿದ್ದರೆ ವಾಪಸ್ ಪಡೆದುಕೊಳ್ಳಿ ಎಂದು ಹೇಳಿದ್ದೇನೆ. ತನಿಖೆ ನಡೆಸಿ ವಶಕ್ಕೆ ತೆಗೆದುಕೊಳ್ಳಿ ಎಂದು ಪತ್ರವನ್ನೇ ಬರೆದಿದ್ದೆ. ಆದರೆ, ನನ್ನ ಮನವಿ ಅಲಕ್ಷ್ಯ ಮಾಡಿ ೪೦ ವರ್ಷಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು





