ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು, ಕಪಿಲೆ ರೌದ್ರಾವತಾರ ತಾಳಿದ್ದಾಳೆ.
ಇನ್ನೂ ಕಪಿಲಾ ನದಿ ಮೈದುಂಬಿ ಹರಿಯುತ್ತಿದ್ದು, ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಆತಂಕ ಶುರುವಾಗಿದೆ.
ಇನ್ನೂ ನಾಲ್ಕು ದಿನಗಳ ಕಾಲ ಮಳೆ ಹಿಗೇಯೇ ಮುಂದುವರಿಯಲಿದ್ದು, ಜಲಾಶಯಕ್ಕೆ ಇನ್ನೂ ಹೆಚ್ಚಿನ ಒಳಹರಿವು ಬರಲಿದೆ. ಪರಿಣಾಮ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾರೂ ಕೂಡ ನದಿಯ ಬಳಿ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.
ಇನ್ನೂ ನದಿ ಪಾತ್ರದ ಜನರು ತಮ್ಮ ಜಾನುವಾರುಗಳನ್ನು ದೂರದ ಊರಿಗೆ ಸಾಗಿಸಬೇಕು ಎಂದು ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದ್ದು, ಹೊರಹರಿವನ್ನು ಕಡಿಮೆ ಮಾಡುವವರೆಗೂ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದ್ದಾರೆ.