ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಕಳೆದ ಎರಡು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಇದೀಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 70,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 80,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 83 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದೆ.
ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಡ್ಯಾಂ ಮುಂಭಾಗದ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಕಪಿಲಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಗೆ ಇಳಿಯದಂತೆ ಜನತೆಗೆ ಸೂಚನೆ ನೀಡಲಾಗಿದೆ.
ಮಾಹಿತಿ ಪ್ರಕಾರ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡುವ ಮುನ್ಸೂಚನೆ ಕಾಣುತ್ತಿದ್ದು, ನದಿ ಪಾತ್ರದ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.