ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಭಾರೀ ಚುರುಕು ಕಂಡಿದ್ದು, ಕಳೆದ ಐದು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲೂ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಬೆಳಿಗ್ಗೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಶಾಲೆಗೆ ಹೋಗಲು ಮಕ್ಕಳು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನೂ ಮಳೆ ಸುರಿಯುತ್ತಿರುವ ಪರಿಣಾಮ ಚಳಿಯ ವಾತಾವರಣ ನಿರ್ಮಾಣವಾಗಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆ ಮಾಡಿದೆ.
ಇನ್ನೂ ಭಾರೀ ಮಳೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಾಗೂ ತಾರಕ ಜಲಾಶಯ ಹಾಗೂ ಸರಗೂರು ತಾಲ್ಲೂಕಿನ ನುಗು ಜಲಾಶಯಗಳ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಭರ್ತಿಯತ್ತ ಸಾಗುತ್ತಿವೆ.
ಮಳೆ ಹೀಗೇಯೇ ಮುಂದುವರಿದರೆ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ನಾಲೆಗಳು ಹಾಗೂ ನದಿಗೆ ಯಾವುದೇ ಕ್ಷಣದಲ್ಲಾದರೂ ನೀರು ಬಿಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.