ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಸವಲತ್ತುಗಳನ್ನು ಗರಿಷ್ಠ ಪ್ರಮಾಣದಲ್ಲಿ ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು ಸೂಚಿಸಿದರು.
ಇಂದು (ಆ.19) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದೆ ಜಿಲ್ಲಾ ಮಟ್ಟದ ಉಸ್ತುವಾರಿ ಸಭೆಯನ್ನು ಪ್ರತಿ ತಿಂಗಳಿಗೆ ಎರಡು ಬಾರಿ ನಡೆಸಲಾಗುವುದು ಇದರಿಂದ ರೈತರ ಕುಟುಂಬಗಳಿಗೆ ನೆರವು ನೀಡಲು ಹಾಗೂ ಸಮರ್ಪಕ ಉಸ್ತುವಾರಿ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಆಗಬಾರದು. ಒಂದು ವೇಳೆ ಹಾಗೆನಾದರೂ ಆದಲ್ಲಿ 24 ಗಂಟೆಯೊಳಗಾಗಿ ಅಧಿಕಾರಿಗಳು ಭೇಟಿ ನೀಡಿ ರೈತ ಕುಟುಂಬಕ್ಕೆ ಸ್ಪಂದಿಸಬೇಕು. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ವಿಧವಾ ವೇತನ, ಹಾಸ್ಟೆಲ್ ವ್ಯವಸ್ಥೆ, ಆಯುಷ್ಮಾನ್ ಕಾರ್ಡ್ ಇತ್ಯಾದಿ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಡಿಎ, ಎಡಿಎ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.