Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಗುರುವಾರ ಸಮಾಜ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್.ಸಿ, ಎಸ್.ಟಿ ದೌರ್ಜನ್ಯ ನಡೆದರೆ ತಕ್ಷಣ ಎಫ್ ಐ ಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಸ್ ಸಿ ಪಿ, ಟಿ ಎಸ್ ಪಿ ಅನುದಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ 77 ಸಮುದಾಯ ಭವನಗಳನ್ನು ನಿರ್ಮಿಸಲು ಸಮಿತಿ ರಚಿಸಲಾಗುತ್ತಿದೆ. ಹೊಲಿಗೆ ಯಂತ್ರದ ವಿತರಣೆ ಬದಲು ಲ್ಯಾಪ್ ಟಾಪ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಿಗೆ ಕಾಟ್ ಹಾಗೂ ಬೆಡ್ ಗಳನ್ನು ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ: ಮ.ಬೆಟ್ಟದ ಆದಾಯವನ್ನು ಹಳ್ಳಿಗಳ ಅಭಿವೃದ್ಧಿಗೆ ಬಳಸಿ ; ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಮೈಸೂರು ಮಹಾ ನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್ ಮಾತನಾಡಿ, ಮೈಸೂರು ಮಹಾನಗರ ಪಾಲಿಕೆಯ ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಅನುದಾನದಲ್ಲಿ ಎಂಜಿನಿಯರಿಂಗ್, ಎಂ ಬಿ ಬಿ ಎಸ್ ಹಾಗೂ ಪೋಸ್ಟ್ ಗ್ರಾಜುಯೇಟ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಾಸ್ಟೆಲ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಿಯಾ ಯೋಜನೆ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.

ಸಮಿತಿಯ ಸದಸ್ಯರಾದ ಚಿಕ್ಕ ಜವರಯ್ಯ ಮಾತನಾಡಿ, ಎಸ್ ಸಿ ಪಿ, ಟಿ ಎಸ್ ಪಿ ಅನುದಾನ ಸಕಾಲದಲ್ಲಿ ವೆಚ್ಚವಾಗುತ್ತಿಲ್ಲ. ಅರ್ಜಿ ಹಾಕಿದ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಿದ್ದರೂ ವಿದ್ಯುತ್ ಸೌಲಭ್ಯ ಕಲ್ಪಿಸಿಲ್ಲ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಜಮೀನನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಸಮಿತಿಯ ಸದಸ್ಯರಾದ ಎಸ್.ಟಿ.ರವಿಕುಮಾರ್, ಎಸ್ ಬಸವರಾಜು, ಡಿ.ಸಿ.ಪಿ ಬಿಂದುಮಣಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!