ಮೈಸೂರು : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ
ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ
ಆಂಧ್ರಪ್ರದೇಶದಲ್ಲಿ ವಿದೇಶಿ ಕಂಪನಿಗಳು ಹೂಡಿಕೆ ಮಾಡುತ್ತಿರುವ ಬಗ್ಗೆ ಆಂಧ್ರದ ಸಚಿವರೊಬ್ಬರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಹೂಡಿಕೆದಾರರು ತಮಗೆ ಅನುಕೂಲಕರವಾದ ಪ್ರದೇಶಗಳಲ್ಲಿ ಬಂಡವಾಳ ಹೂಡುತ್ತಾರೆ. ಕರ್ನಾಟಕದಲ್ಲಿ ಬಹಳಷ್ಟು ಹೂಡಿಕೆದಾರರು ಬಂಡವಾಳ ಈಗಾಗಲೇ ಹೂಡಿಕೆ ಮಾಡಿದ್ದು, ಅವರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗಿರುವ ಬಗ್ಗೆ ದೂರಿದ್ದಾರೆಯೇ? ಐಫೋನ್ ತಯಾರಿಕೆಯ ದೊಡ್ಡ ಹೂಡಿಕೆ ಕರ್ನಾಟಕದಲ್ಲಿಯೇ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ ಎಂದರು.





