ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ.
ಆದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್ ಹಾಗೂ ಕಬಿನಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಾ ಬರುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 99.20 ಅಡಿಗಳಾಗಿದೆ. ಜಲಾಶಯದಿಂದ 3841 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ಜಲಾಶಯಕ್ಕೆ ಕೇವಲ 81 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ಇನ್ನು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 66 ಅಡಿಗಳಾಗಿದೆ. ಜಲಾಶಯಕ್ಕೆ 93 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 800 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಮುಂಗಾರು ಮಳೆ ತನ್ನ ಆರ್ಭಟ ಶುರುಮಾಡಿದರೆ ಈ ಜಲಾಶಯಗಳು 15 ದಿನಗಳ ಒಳಗೇ ಭರ್ತಿಯತ್ತ ಸಾಗಲಿವೆ. ಈ ಬಾರಿ ಉತ್ತಮ ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಈ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿವೆ ಎಂದು ಹೇಳಲಾಗುತ್ತಿದೆ.





