ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕದಗೆಡುವ ರೀತಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.
ಮೇ 5ರಂದು ಮೈಸೂರು ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆಯಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇದಾದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಪರ ವಿರೋಧ ಚರ್ಚೆಯ ಜೊತೆಗೆ ಓಪನ್ ಚಾಲೆಂಜ್ ಹಾಕಲಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವ ರೀತಿಯಲ್ಲಿ ಪೋಸ್ಟ್ ಗಳನ್ನು ಹಾಕಿದ್ 15ಕ್ಕೂ ಹೆಚ್ಚು ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಕಮಿಷನರ ತಿಳಿಸಿದರು.
ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ರೀತಿ ಪೋಸ್ಟ್ ಹಾಕಿದರೆ ಕಾನೂನು ಕ್ರಮ ಜರುಗಿಸುತ್ತೇವೆ. ಇದಕ್ಕಾಗಿಯೇ 52 ಮಂದಿ ಪೊಲೀಸರನ್ನು ಒಳಗೊಂಡ ಸೋಷಿಯಲ್ ಮೀಡಿಯಾ ಮಾನಿಟರ್ ತಂಡವನ್ನು ನಿಯೋಜಿಸಲಾಗಿದೆ.
ಈ ತಂಡ ದಿನವೂ ಮಾನಿಟರ್ ಮಾಡುತ್ತಿದೆ. ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸಮಾಜ ವಿರೋಧಿ ಪೋಸ್ಟ್ ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇತ್ತೀಚೆಗೆ ರೌಡಿ ಪೆರೇಡ್ ನಡೆಸಲಾಗಿದೆ. 15 ದಿನಕ್ಕೊಮ್ಮೆ ರೌಡಿಗಳ ಪೆರೇಡ್ ನಡೆಸಲಾಗುತ್ತಿದೆ. ರೌಡಿಶೀಟರ್ ಗಳ ಮೇಲೂ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಅವರು ಹೇಳಿದರು.





