Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಯುವ ನಿಧಿ ಯೋಜನೆ ನೋಂದಣಿ ಬಗ್ಗೆ ಅಭ್ಯರ್ಥಿಗಳಲ್ಲಿ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿಸಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಂದು(ಆ.14) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವನಿಧಿ ಯೋಜನೆಯ ನೋಂದಣಿ ಕುರಿತು ಯೋಜನೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ 2023 ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆಗೆ ಇದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಆಧಿಕಾರಿಗಳಿಗೆ ನೀಡುವಂತೆ ತಿಳಿಸಿ, ಜಿಲ್ಲೆಯ ಅರ್ಹ ಪದವಿ, ಡಿಪ್ಲೋಮಾ, ಪದವೀಧರರು ಸರ್ಕಾರದ ಯೋಜನೆಯ ನೆರವು ಪಡೆಯುವಂತೆ ತಿಳಿಸಿದರು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ಹಂತದಲ್ಲಿ ಅಭ್ಯರ್ಥಿಗಳ ಹಾಜರಿ ಕಡ್ಡಾಯವಲ್ಲವಾಗಿದ್ದು, ಅಭ್ಯರ್ಥಿಗಳು ನೀಡಿರುವ ದಾಖಲೆಯ ನೈಜತೆಯನ್ನು ಆಧರಿಸಿ ಅರ್ಜಿಯನ್ನು ತಿರಸ್ಕೃತ ಅಥವಾ ಅನುಮೋದನೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ ಎಂ ರಾಣಿಯವರು ಮಾತನಾಡಿ, ಇವರೆಗೂ ಮೈಸೂರು ಜಿಲ್ಲೆಯಲ್ಲಿ 6516 ಅಭ್ಯರ್ಥಿಗಳು ಇವನಿಗೆ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, 4279 ಅಭ್ಯರ್ಥಿಗಳ ಅರ್ಜಿಯನ್ನು ಅನುಮೋದಿಸಲಾಗಿರುತ್ತದೆ. ಇನ್ನುಳಿದ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ ಚಾಲ್ತಿಯಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25 ನೇ ತಾರೀಕಿನಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಸ್ವಯಂ ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರನಗದು ವರ್ಗಾವಣೆಯಾಗುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: