ಮೈಸೂರು

ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಿ : ಸಚಿವ ಮಹದೇವಪ್ಪ

ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ

ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಎಂದು ಸಚಿವರಿಂದ ಸೂಚನೆ

ತಿ.ನರಸೀಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಈ ತಾಲ್ಲೂಕನ್ನು ಪ್ರತಿನಿಧಿಸುತ್ತೇವೆ. ಯಾವುದೇ ಕಾರಣಕ್ಕೂ ಇಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ನಿರ್ದೇಶಿಸಿದರು.

ತಾಲ್ಲೂಕಿನ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ‌. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಜವಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಎರಡು ದಿನ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರ್ಕಾರವು ಜನರ ಪರ ಇದೇ ಎಂಬ ಆತ್ಮವಿಶ್ವಾಸ ಮೂಡಿಸುವುದರಲ್ಲಿ ಅಧಿಕಾರಿಗಳ ಪಾತ್ರ ಹೆಚ್ಚಿದೆ. ಈ ನಿಟ್ಟಿನಲ್ಲಿ ಕಚೇರಿಯಲ್ಲಿ ಅಧಿಕಾರಿಗಳು ಕೂರಬಾರದು. ಜನರ ಬಳಿಗೆ ತೆರಳಬೇಕು. ಅವರ ಕಷ್ಟಗಳನ್ನು ಆಲಿಸಿ ಪರಿಹರಿಸಬೇಕು ಎಂದರು‌.

ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೌಲಭ್ಯ, ಪಡಿತರ ವಿತರಣೆ ಸೇರಿದಂತೆ ಎಲ್ಲಾ ಬಗೆಯ ಮೂಲಭೂತ ಸೌಕರ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕು. ಸರ್ಕಾರದ ಸೌಲಭ್ಯಗಳಿಂದ ಯಾರೂ ವಂಚಿತರಾಗಬಾರದು ಎಂದು ಹೇಳಿದರು.

ಕೃಷಿ ಇಲಾಖೆ
ತಾಲ್ಲೂಕಿನಲ್ಲಿ 44,136 ಹೆಕ್ಟೇರ್ ಸಾಗುವಳಿ ವಿಸ್ತೀರ್ಣವಿದೆ. ಕೃಷಿಗೆ ಉಪಯೋಗವಿರುವ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಬಿತ್ತನೆಗೆ ಕ್ರಮವಹಿಸಿ. ರಸಗೊಬ್ಬರ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಿ. ಅದಕ್ಕೆ ಪರ್ಯಾಯವಾಗಿ ಸಾವಯವ ಗೊಬ್ಬರ ಬಳಸುವಂತೆ ತಿಳಿಸಿ.

ಸರ್ಕಾರದಿಂದ ರೈತರಿಗೆ ದೊರಕುವ ಸೌಲಭ್ಯವನ್ನು ಪರಿಣಾಮಕಾರಿಯಾಗಿ ತಲುಪಿಸಿ. ಈ ಸಂಬಂಧ ಮಾಹಿತಿಯನ್ನು ಕಾಲಕಾಲಕ್ಕೆ ನನಗೆ ನೀಡಬೇಕು. ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ವಿತರಿಸಬೇಕು. ಬೆಳೆಗಳಿಗೆ ನೀರಿನ ಕೊರೆತೆಯಾಗಬಾರದು. ಜನರ ಸ್ವಾವಲಂಬಿ ಬದುಕಿಗೆ ಹಾಗೂ ಆರ್ಥಿಕವಾಗಿ ಸಬಲತೆಗೆ ಕೃಷಿ ಕ್ಷೇತ್ರ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚಿಸಿದರು.

ತಿ.ನರಸೀಪುರ ಪುರಸಭೆ
ಪುರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಕೊರತೆಯಾಗಬಾರದು. ಬೀದಿ ದೀಪ, ರಸ್ತೆ, ಚರಂಡಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕು. ಸ್ವಚ್ಛತೆ ಕಾಪಾಡಬೇಕು. ಈ ಕುರಿತು ಜವಜ್ದಾರಿಯಿಂದ ಕೆಲಸ ಮಾಡಿ ಎಂದು ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಒಳಚರಂಡಿ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ವಸತಿ ರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಒದಗಿಸಬೇಕು. ಮೇಲ್ಸೆತುವೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ತಿಳಿಸಿದರು.

ಸಂಸದರಾದ ಸುನೀಲ್ ಬೋಸ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿನ ರಸ್ತೆಗಳಲ್ಲಿ ಬೀದಿದೀಪ ಅಳವಡಿಸಬೇಕು. ಬಂಗಾರಪ್ಪ ಬಡಾವಣೆ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಗೋಪಾಲಪುರ ಬಡಾವಣೆಯಲ್ಲಿ ಕಾನೂನುಬಾಹಿರವಾಗಿ ಅತಿಕ್ರಮಿಸಿರುವ ಜಾಗವನ್ನು ತರೆವುಗೊಳಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಲು ಕ್ರಮವಹಿಸಿ ಎಂದು ತಾಕೀತು ಮಾಡಿದರು.

ಸಮಾಜ ಕಲ್ಯಾಣ ಇಲಾಖೆ
ಪರಿಶಿಷ್ಟ ಜಾತಿ ಜನರು ವಾಸಿಸುವ ಗ್ರಾಮಗಳಲ್ಲಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕಾಮಗಾರಿಗಳನ್ನು ಅದ್ಯತೆಯಲ್ಲಿ ಪರಿಗಣಿಸಿ ಕೈಗೊಳ್ಳಬೇಕು. ಸ್ಮಾಶಾನವಿಲ್ಲದ ಗ್ರಾಮಗಳಲ್ಲಿ ಜಾಗವನ್ನು ಗುರುತಿಸಬೇಕು. ಸ್ಥಗಿತಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗಳನ್ನು ಪುನಾರಂಭಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಪುರಸಭೆ ಅಧ್ಯಕ್ಷರಾದ ವಸಂತ ಶ್ರೀಕಂಠ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ತಹಸಿಲ್ದಾರ್ ಸುರೇಶ್ ಆಚಾರ್, ತಾಲ್ಲೂಕು ಪಂಚಾಯತ್ ಇಒ ಆನಂತ ರಾಜು ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಕೆ.ಡಿ.ಪಿ ಸಭೆಯ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

3 mins ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

46 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

2 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago