ಮೈಸೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಟಿ.ನರಸೀಪುರದ ದಲಿತ ನಾಯಕರು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಮುನಿರತ್ನ ಗುತ್ತಿಗೆದಾರ ಚಲುವರಾಜು ಎಂಬುವವರಿಗೆ ಜೀವ ಬೆದರಿಕೆ ಹಾಕಿದ್ದಲ್ಲದೇ, ಅವರ ಜಾತಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ದಲಿತರ ಬಗ್ಗೆ ತುಂಬಾ ಕೀಳಾಗಿ ಮಾತನಾಡಿದ್ದಾರೆ.
ಇದೆಲ್ಲದರ ಜೊತೆಗೆ ಮಹಿಳೆಯರ ಘನತೆಗೆ ಕುಂದು ತರುವಂತೆ ಅವಾಚ್ಯ ಶಬ್ಧಗಳನ್ನು ಬಳಸಲಾಗಿದೆ. ಹಾಗಾಗಿ ಮುನಿರತ್ನ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ ಮನಸೋ ಇಚ್ಛೆ ನಿಂದಿಸಿದ್ದಾರೆ ಎನ್ನಲಾಗಿದೆ.
ಆತನಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಶಾಸಕ ಮುನಿರತ್ನ, ಒಂದು ವೇಳೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ ಎನ್ನಲಾಗುತ್ತಿದ್ದು, ಪೊಲೀಸರ ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.