ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ತಿಳಿಸಿದರು.
ನಾಳೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಿಟಿ ರವಿ ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತೆ ಎಂದು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ಪ್ರತಿಭಟನಾಕಾರರೆಲ್ಲ ಮಹಾರಾಜ ಕಾಲೇಜು ಮೈದಾನದಲ್ಲಿ ಸೇರಿ ಬಳಿಕ ಮುಡಾ ಕಚೇರಿ ಮುತ್ತಿಗೆ ಮಾಡುವ ಕೆಲಸ ಮಾಡುತ್ತೇವೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು ಎಂದು ಆಗ್ರಹಿಸುತ್ತೇವೆ ಎಂದರು.
ಪೊಲೀಸರು ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಮುಡಾ ಸಂಬಂಧ ಪ್ರತಿಭಟನೆ ಮಾಡಲು ಯಾರಿಗೂ ಅವಕಾಶ ಕೊಡದೇ ಜನಸಾಮಾನ್ಯರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ನಾವು ಏನೇ ಮಾಡಿದರೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದರು.