ಮೈಸೂರು : ಪ್ರವಾಸೋದ್ಯಮ ಉತ್ತೇಜಿಸುವ ಸಲುವಾಗಿ ಪ್ರವಾಸೋದ್ಯಮ ಇಲಾಖೆಯಿಂದ ಜನವರಿ 26 ರಿಂದ 28 ವರೆಗೆ ಹಮ್ಮಿಕೊಳ್ಳಲಾಗಿರುವ ಮೈಸೂರು ಫೆಸ್ಟ್ -2024 ಕಾರ್ಯಕ್ರಮ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್. ಬಿ ಅವರಿಂದ ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಹಾಗೂ ಕ್ಲಾಕ್ ಟವರ್ ಸ್ಧಳಕ್ಕೆ ಭೇಟಿ ನೀಡಿ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು ಫೆಸ್ಟ್ -2024 ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಲು ಸೂಚನೆ ನೀಡಿದರು. ಈ ಕಾರ್ಯಕ್ರಮ ಸಂಬಂಧ ಚಿತ್ರ ಸಂತೆ, ಚಿತ್ರ ಕಲಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಗ್ರಾಮೀಣ ಕ್ರೀಡೆಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದ ದಿನದಂದು ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಮೊಬೈಲ್ ಶೌಚಾಲಯ ಹಾಗೂ ಸ್ವಚ್ಚತೆಯ ಬಗ್ಗೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಲು ಅಗತ್ಯವಾದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲು ಮಾಡಲಾಗುವುದು ಹಾಗೂ ವೇದಿಕೆ ಕಾರ್ಯಕ್ರಮ ಹಾಗೂ ಇತರೆ ಕಾರ್ಯಕ್ರಮಗಳನ್ನು ಯೋಜಿತ ವಾಗಿ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ರಮೇಶ್. ಬಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ, ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ , ಮೂಡಾ ಕಾರ್ಯದರ್ಶಿ ಶೇಖರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.