ಮೈಸೂರು: ಐದು ವರ್ಷ ಪೂರ್ತಿ ಅಪ್ಪನೇ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 135 ಶಾಸಕರು ಒಟ್ಟಾಗಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದಾರೆ. ಆದ್ದರಿಂದ ಯಾವುದೇ ಕಾರಣವಿಲ್ಲದೇ ಸಿಎಂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಮುಂದಿನ ಐದು ವರ್ಷ ಅಪ್ಪನೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಇನ್ನು ನಮ್ಮ ತಂದೆಯವರ ಜೊತೆ ಕೇಂದ್ರ ನಾಯಕರು ಕೂಡ ಇದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಶಾಸಕರು ಸಿಎಂಗೆ ಬೆಂಬಲ ನೀಡಿದ್ದಾರೆ. ನನ್ನ ತಂದೆಯವರು ಏನೂ ತಪ್ಪು ಮಾಡಿಲ್ಲ. ಹಾಗಾಗಿ ಎಲ್ಲರೂ ಸಿಎಂ ಸಿದ್ದರಾಮಯ್ಯ ಪರ ಮೈಸೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಕುಂದಿಲ್ಲ. ನಾವು ಎಲ್ಲವನ್ನೂ ಎದುರಿಸಲು ಶಕ್ತರಾಗಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್‌ನವರು ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದೇ ನಿಜವೆಂದು ನಂಬಿಸಲು ಪ್ರಯತ್ನ ಮಾಡುತ್ತಾರೆ ಎಂದು ಕಿಡಿಕಾರಿದರು.