Mysore
26
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಮೈಸೂರು | ಕ್ಷಯ ಮುಕ್ತ ಜಿಲ್ಲೆಗೆ ಪಣ ತೊಡಿ ; ಜಿ.ಪಂ ಸಿಇಒ

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ

ಮೈಸೂರು :  ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಕ್ಷಯಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ಸದಸ್ಯರುಗಳಿಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ. ಕ್ಷಯ ಇರುವ ರೋಗಿಗಳಿಗೆ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕ್ಷಯ ರೋಗ ನಿರ್ಮೂಲನೆ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕ್ಷಯ ರೋಗಿಗಳಿಗೆ ಅರಿವನ್ನು ಮೂಡಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿರುವ ಉದ್ದೇಶ ತಳಮಟ್ಟದಲ್ಲಿ ಗ್ರಾಮ ಪಂಚಾಯಿತಿ ಇದೆ. ನಾವು ಯಾವುದೇ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದರೆ ಗ್ರಾಮ ಪಂಚಾಯತ್ ಮಟ್ಟಕ್ಕೆ ನಾವು ತೆಗೆದುಕೊಂಡು ಹೋದರೆ ಮಾತ್ರ ಅದು ಅನುಷ್ಠಾನ ಮಾಡಲಿಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅನುಷ್ಠಾನ ಮಾಡುವಲ್ಲಿ ಪ್ರಮುಖರಾಗಿದ್ದು, ನೀವು ಎಲ್ಲಾ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳ ಜೊತೆ ಒಟ್ಟುಗೂಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅನುಷ್ಠಾನ ಮಾಡಬೇಕು. ಎಲ್ಲರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನವಾಗಿಸಬೇಕು ಎಂದು ಹೇಳಿದರು.

ಈ ಅಭಿಯಾನವನ್ನು ಯಶಸ್ವಿಗೊಳಿಸಲು ಟಾಸ್ಕ್ ಪೋರ್ಸ್ ರಚನೆ ಮಾಡಬೇಕು. ಈ ಟಾಸ್ಕ್ ಪೋರ್ಸ್ ರಚಿಸುವ ನಿಟ್ಟಿನಲ್ಲಿ ತಮಗೆ ಕೊಟ್ಟಿರುವಂತಹ ಮಾರ್ಗ ಸೂಚಿಗಳ ಅನ್ವಯ ಕ್ಷೇತ್ರದಲ್ಲಿ ಕೆಲಸ ಮಾಡಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆ ಮಾಡಬೇಕು. ಕ್ಷಯರೋಗಿಗಳನ್ನು ಗುರುತಿಸುವುದು ಅವರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತಹ ಕೆಲಸವನ್ನು ಟಾಸ್ಕ್ ಪೋರ್ಸ್ ಕಡೆಯಿಂದ ನೀವು ಅನುಷ್ಠಾನ ಮಾಡಬೇಕು ಎಂದು ಸೂಚಿಸಿದರು.

ಈ ಕಾರ್ಯಕ್ರಮದ ಜೊತೆಗೆ ಆರೋಗ್ಯ ಇಲಾಖೆಯ ಇತರ ಯೋಜನೆಗಳನ್ನು ಇಲ್ಲಿ ಅಳವಡಿಸಬೇಕು. ಇದರ ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಒತ್ತಡ ನಿರ್ವಹಣೆ ಹೇಗೆ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಕ್ಷಯ ರೋಗವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವು ಕೂಡ ಕ್ಷಯ ಮುಕ್ತ ಭಾರತ ಮಾಡಬೇಕು ಎಂದು ಹಲವು ಯೋಜನೆ ರೂಪಿಸಿದ್ದು ಈ ನಿಟ್ಟಿನಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ. ನಮ್ಮ ಜೊತೆಗೂಡಿ ಹಲವಾರು ಸ್ವಯಂ ಸೇವಕರು ಹಾಗೂ ಸಂಘಟನೆಗಳೂ ಕೆಲಸ ಮಾಡುತ್ತಿವೆ. ಇದರ ಜೊತೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಕೂಡ ಸೇರಿ ಯಶಸ್ವಿಯಾಗಿ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಪ್ರಚಾರ ಕೊಡುವುದರ ಮೂಲಕ ತಮ್ಮ ಭಾಗಗಳಲ್ಲಿ ಕ್ಷಯ ಮುಕ್ತ ಮಾಡುವಂತೆ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕ್ಷಯ ಹೆಚ್ಚಾಗಿ ಕಂಡು ಬರುತ್ತದೆ ಆದ್ದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಒತ್ತನ್ನು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಸಿ ಕುಮಾರಸ್ವಾಮಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ. ಜಯಂತ್ ಎಂ.ಎಸ್ ಅವರು ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags: