ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪ ಹೇಳಿ ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.
ರತ್ನಪುರಿಯ ಕಿರಣ್ ಎಂಬುವವರು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು.
ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮರು ಹುಣಸೂರಿನ ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀಯಾ? ಎಂದು ಕಿರಣ್‌ನನ್ನು ಬೆದರಿಸಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಖದೀಮರು, ಹಣ ಕೊಟ್ಟರೆ ಬಿಡುವುದಾಗಿ ಧಮ್ಕಿ ಹಾಕಿದ್ದರು. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಕೂಡ ಸೇರಿದ್ದು, ಆರೋಪಿಗಳನ್ನು ಪ್ರಶ್ನಿಸಿ ಗೂಸಾ ನೀಡಿದ್ದರು.
ಕಿರಣ್ ನೀಡಿದ ದೂರಿನ ಮೇರೆಗೆ ಈಗ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.





