ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ನಂಜುಂಡೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು.
ಬಳಿಕ ಗೌತಮ ಪಂಚಮಹಾರಥೋತ್ಸವಕ್ಕೆ ಗಣ್ಯರು ಚಾಲನೆ ನೀಡಿದರು. ನಂಜನಗೂಡಿನ ರಥ ಬೀದಿಗಳಲ್ಲಿ ಸಾಗಿದ ಶ್ರೀಕಂಠೇಶ್ವರ, ಪಾರ್ವತಿ, ಗಣೇಶ, ಸುಬ್ರಮಣ್ಯ, ಚಂಡಿಕೇಶ್ವರ ರಥಗಳನ್ನು ಕಣ್ತುಂಬಿಕೊಳ್ಳಲು ಭಕ್ತರು ಕಿಕ್ಕಿರಿದು ಸೇರಿದ್ದರು.
ರಥೋತ್ಸವದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ, ಎಡಿಎ ಶಿವರಾಜ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು.
ಇನ್ನು ರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.





