ನಂಜನಗೂಡು : ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, 50 ಲಕ್ಷ ರೂ ವೆಚ್ಚದಲ್ಲಿ ಚೆಸ್ಕಾಂ ಇಲಾಖೆಯಿಂದ ಮಾದರಿ ಗ್ರಾಮ ಯೋಜನೆಯಡಿಯಲ್ಲಿ ಕಾಮಗಾರಿ, ವೀರದೇವನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ 14.50 ಲಕ್ಷ ರೂ. ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿ, ಹಳೇಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ 14.50 ಲಕ್ಷ ರೂ. ಹಾಗೂ ಕುರಹಟ್ಟಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ಹುಣಸನಾಳು ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಮುದ್ದಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸೌರ ಘಟಕದ ನಿರ್ಮಾಣ ಕಾಮಗಾರಿ ಹಾಗೂ ಕಾಳಿಹುಂಡಿ ಗ್ರಾಮದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, ಹಾಗೂ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು.
ಇದನ್ನೂ ಓದಿ:-ಭತ್ತ, ರಾಗಿ ಖರೀದಿ ನೋಂದಣಿಯ ಅವಧಿ ವಿಸ್ತರಣೆ
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿಯೂ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಅದರಂತೆ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಮಾಡಲಾಗುತ್ತಿದೆ. 22 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೀಡಿದ್ದಾರೆ. ಚೆಸ್ಕಾಂ ಇಲಾಖೆಯಿಂದ ಮಾದರಿ ಗ್ರಾಮ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು 3.13 ಕೋಟಿ ರೂ.ವೆಚ್ಚದಲ್ಲಿ ವಿವಿಧ ಗ್ರಾಮ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆನಂದ್, ಚೆಸ್ಕಾಂ ಸಹಾಯಕ ಇಂಜಿನಿಯರ್ ದೇವರಾಜಯ್ಯ, ಕಿರಣ್, ಮುಖಂಡರಾದ ಬದನವಾಳು ಸೋಮು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಳೇಪುರ ನಿರಂಜನ್, ಕವಲಂದೆ ರಾಹುಲ್, ಶ್ರೀರಾಂಪುರ ಲೋಕೇಶ್ ಸೇರಿದಂತೆ ಹಲವರು ಹಾಜರಿದ್ದರು.





