ಮೈಸೂರು: ಇಲ್ಲಿನ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿಯ ಪ್ರವಾಹ ಪೀಡಿತ ಸಂತ್ರಸ್ತರಿಗೆ ಸೂಕ್ತ ಜಾಗ ಗುರುತಿಸಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿ, ಸರ್ಕಾರದಿಂದ ಸೂಕ್ತ ಧನಸಹಾಯ ಒದಗಿಸಲು ಕ್ರಮವಹಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದರು.
ಶನಿವಾರ(ಆ.3) ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜೊತೆಗೂಡಿ ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕಹಳ್ಳಿಗೆ ಭೇಟಿ ನೀಡಿ, ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ಬಳಿಕ ಮಾತನಾಡಿ, ಪ್ರವಾಹ ಪೀಡಿತರಿಗೆ ಸೂಕ್ತ ಮೂಲಭೂತ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಸಂತ್ರಸ್ತರಿಗೆ ಬೆಡ್ ಶಿಟ್ಗಳನ್ನು ವಿತರಿಸಿದರು.
ಬಳಿಕ ಪ್ರವಾಹದಿಂದ ಹಾನಿ ಆಗಿರುವ ಬೆಳೆ ನಾಶ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಕುರಿತು ಪರಿಶೀಲನೆ ನಡೆಸಿದರು.
ಬೊಕ್ಕಹಳ್ಳಿ ಗ್ರಾಮ ಪ್ರತಿವರ್ಷ ಮುಳುಗಡೆ ಆಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೇರೆ ಕಡೆ ನಿವೇಶನಗಳನ್ನು ಕೊಟ್ಟು ಮನೆ ನಿರ್ಮಿಸಿ ಕೊಡಬೇಕು ಎಂದು ಇದೇ ವೇಳೆ ಗ್ರಾಮಸ್ಥರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





