Mysore
22
broken clouds
Light
Dark

ರಾಜ್ಯದಲ್ಲಿ ಮೈತ್ರಿ ಪರ ಒಲವಿದೆ, ನಿಖಿಲ್‌ ಗೆಲ್ತಾರೆ: ಎಂಎಲ್‌ಸಿ ಮಂಜೇಗೌಡ

ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಜಯಗಳಿಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬಳಿಕ ಅವರು ತಾವು ಪ್ರತಿನಿಧಿಸಿ ಗೆಲುವು ಸಾಧಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಭಾರೀ ಪೈಪೋಟಿಗಿಳಿದಿದ್ದಾರೆ.

ಒಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನೊಂದೆಡೆ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಚನ್ನಪಟ್ಟಣ ಉಪಚುನಾವಣೆ ಸಂಬಂಧ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಮಂಜೇಗೌಡ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು. ಆ ಕ್ಷೇತ್ರದ ಜನರೆಲ್ಲಾ ಡಿಕೆಶಿಯನ್ನು ತಿರಸ್ಕರಿಸಿದ್ದಾರೆ. ಈಗ ಜನತೆ ಮೈತ್ರಿ ಪರ ಭಾರೀ ಒಲವು ತೋರಿದ್ದಾರೆ ಎಂದರು.