ಮೈಸೂರು: ಮೈಸೂರಿನ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಮೈಸೂರಿನ ರಾಷ್ಟ್ರೀಯ ಹೆದ್ದಾರಿಯ ಕೆ.ಆರ್. ಮಿಲ್ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಸೋಮವಾರ ಸುದ್ದಿಗಾರರೊಂದಿಗೆ ಯದುವೀರ್ ಒಡೆಯರ್ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಜನರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು ಎಂದರು.
ಕಾಮಗಾರಿ ಕೆಲಸ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದರು ತಿಳಿಸಿದರು.
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ರೀತಿಯ ಕೆಲಸಗಳನ್ನು ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು ಎಂದು ಯದುವೀರ್ ಒಡೆಯರ್ ಹೇಳಿದರು.





