ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿಭಟನೆ ನಡೆಸಲಾಗುವುದು. ಕೃಷಿಕರ ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ಕ್ರಮಕೈಗೊಳ್ಳಬೇಕು. ರಾಜ್ಯದ ಜನರು ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಟ್ಟು, ಬಹಳ ನಿರೀಕ್ಷೆಯಿಂದ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರೆ. ಆದರೆ ಅಧಿಕಾರಸ್ಥರ ಮುಖ ಬದಲಾಗಿವೆ ಹೊರತು, ಜನರ ಆಶೋತ್ತರಗಳು ಈಡೇರಿಲ್ಲ. ಆದ್ದರಿಂದ, ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಲು ಹೋರಾಟದ ಹಾದಿ ಹಿಡಿದಿದ್ದೇವೆ ಎಂದು ಅವರು ಶನಿವಾರ(ಜು.13) ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಂಗ್ರೆಸ್ ಸರ್ಕಾರ ಬಂದ ವರ್ಷದ ಅವಧಿಯಲ್ಲೇ, ಎಸ್‌ಸಿ, ಎಸ್‌ಟಿ ವರ್ಗದವರಿಗೆ ಮೀಸಲಿಟ್ಟಿದ್ದ ಅನುದಾನವನ್ನು ದುರಪಯೋಗ ಮಾಡಿಕೊಂಡಿರುವ ಆರೋಪಕ್ಕೆ ಒಳಗಾಗಿದೆ. ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಜನಸಾಮಾನ್ಯರು ಬಯಸಿದ ಬದಲಾವಣೆ ಆಗಿಲ್ಲ. ಭೂಮಾಫಿಯಾದ ಅಕ್ರಮ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಆರೋಪಿಸಿದ ಅವರು ಸರ್ಕಾರ ರೈತ ಹಾಗೂ ಜನಸ್ನೇಹಿ ಆಗಿ ಕಾರ್ಯನಿರ್ವಹಿಸಬೇಕು ಎಂದರು.