ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆ ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್‌ನಲ್ಲಿ ನಮಗೆ ಹಿನ್ನಡೆಯಾಗಿದೆ. ಆದರೆ ನಾನು ಕಾನೂನು ಹೋರಾಟವನ್ನು ನಿಲ್ಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ನನ್ನ ಹೋರಾಟ ಮುಂದುವರೆಯಲಿದ್ದು, ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತೇನೆ ಎಂದರು.
ಹೈಕೋರ್ಟ್ ಇಂದು ನೀಡಿರುವ ಆದೇಶವನ್ನು ಕೂಲಂಕುಷವಾಗಿ ಪರಿಶೀಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿರುವುದು ನಿಜ. ಸಿದ್ದರಾಮಯ್ಯನವರು ಸಿಎಂ ಆಗಿರುವುದರಿಂದ ಲೋಕಾಯುಕ್ತ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಸಿಬಿಐ ತನಿಖೆಗೆ ಕೋರಿ, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ಹೇಳಿದರು.