ಮೈಸೂರು : ಚಾಮುಂಡೇಶ್ವರಿ ದೇವಾಲಯದಲ್ಲಿ ಉತ್ಸವಮೂರ್ತಿ ಸಮೀಪ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾದಲ್ಲಿ ಛಾಯಾಚಿತ್ರ ತೆಗೆಯುವುದು ಮತ್ತು ರೀಲ್ಸ್ ಮಾಡುವುದನ್ನು ನಿಷೇಧಿಸಲಾಗಿದೆ.
ಈ ನಿಯಮವನ್ನು ಉಲ್ಲಂಘನೆ ಮಾಡಿದಲ್ಲಿ ಮೊಬೈಲ್ ಮತ್ತು ಕ್ಯಾಮೆರಾಗಳನ್ನು ಶಾಶ್ವತವಾಗಿ ವಶಪಡಿಸಿಕೊಳ್ಳಲಾಗುವುದು. ಇನ್ನು ಮುಂದೆ ಪ್ರಾಧಿಕಾರದ ವತಿಯಿಂದ ಉತ್ಸವ ಮೂರ್ತಿಯ ಫೋಟೋ ಹಾಗೂ ವೀಡಿಯೋ ಚಿತ್ರೀಕರಿಸಿ ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಸಾದ ವಿತರಣೆ ಜಾಗ ಬದಲು
ಪ್ರತಿ ವರ್ಷ ಮಲ್ಟಿ ಲೆವಲ್ ಪಾರ್ಕಿಂಗ್ ಜಾಗದಲ್ಲಿ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ ಕಾರ್ಯ ನಡೆಯುತ್ತಿತ್ತು. ಈ ಬಾರಿ ಅರಣ್ಯ ಮಾಹಿತಿ ಭವನದ ಆವರಣವನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಮೊದಲ ಶುಕ್ರವಾರ ಪ್ರಾಧಿಕಾರದ ವತಿಯಿಂದಲೇ ಅನ್ನ ಸಂತರ್ಪಣೆ ಕಾರ್ಯ ನಡೆಯುತ್ತಿದೆ. ಮುಂದಿನ ಶುಕ್ರವಾರಗಳಲ್ಲಿ ಸಂಘ-ಸಂಸ್ಥೆಗಳು, ಸೇವಾರ್ಥದಾರರನ್ನು ಒಳಗೊಳ್ಳಿಸಿಕೊಳ್ಳುವ ಆಲೋಚನೆ ಇದೆ ಎಂದು ಹೇಳಿದರು.





