ಮೈಸೂರು : ಬೀದಿ ಬದಿಯ ಸಣ್ಣಪುಟ್ಟ ಗೂಡಂಗಡಿಗಳವರಿಗೂ ಜಿಎಸ್‌ಟಿ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ ಮಾತನಾಡಿ, ಸರ್ಕಾರಿ ಕೆಲಸವನ್ನು ನಿರೀಕ್ಷೆ ಮಾಡದೆ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ಬೀದಿ ಪಾಲು ಮಾಡಲು ಹೊರಟಿರುವ ಸರ್ಕಾರದ ಆರ್ಥಿಕ ನೀತಿ ಖಂಡನೀಯ. ಡಿಜಿಟಲ್ ಪಾವತಿ ಹೆಸರಿನಲ್ಲಿ ವ್ಯಾಪಾರಿಗಳನ್ನು ನಂಬಿಸಿ ಈಗ ಏಕಾಏಕಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡುತ್ತಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಸರ್ಕಾರದ ನೀತಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬೀದಿ ಬದಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳು, ಹಾಲಿನ ವ್ಯಾಪಾರಿಗಳು ಮತ್ತು ಅವರ ಕುಟುಂಬಗಳು ಬೀದಿಗೆ ಬೀಳುವುದರಲ್ಲಿ ಅನುಮಾನವಿಲ್ಲ. ಸರ್ಕಾರ ಕೂಡಲೇ ಎಚ್ಚೆತ್ತು ಬೀದಿ ಬದಿ ವ್ಯಾಪಾರಿಗಳು ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಽಕಾರಿಗಳ ಸಮನ್ವಯ ಸಭೆಯನ್ನು ಕರೆದು, ಸಣ್ಣಪುಟ್ಟ ವ್ಯಾಪಾರಿಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವು ದನ್ನು ಕೈಬಿಡುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಪದಾಧಿಕಾರಿಗಳಾದ ನಾಲಾಬೀದಿ ರವಿ, ಗುರುಬಸಪ್ಪ, ಬೋಗಾದಿ ಸಿದ್ದೇಗೌಡ, ಗೋಪಿ, ಪ್ಯಾಲೇಸ್ ಬಾಬು, ಹರೀಶ್, ಮಹದೇವ ಸ್ವಾಮಿ, ಎಲ್‌ಐಸಿ ಸಿದ್ದಪ್ಪ, ಗೋವಿಂದರಾಜು, ಸ್ವಾಮಿ, ಚಿನ್ನಪ್ಪ, ಶಿವೇಗೌಡ, ಪ್ರೇಮ ಮಾಲಿನಿ, ಪುಷ್ಪಲತಾ, ರಮೇಶ್, ಸ್ವಾಮಿ ಗೈಡ್, ಮಾದಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





