Mysore
23
scattered clouds
Light
Dark

ಕುಡಿಯುವ ನೀರಿನ ಪರೀಕ್ಷೆಯನ್ನು ನಿಯಮಿತವಾಗಿ ಮಾಡಬೇಕು: ಡಾ.ಎಸ್. ಸೆಲ್ವ ಕುಮಾರ್

ಮೈಸೂರು: ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಆಗಿದೆ. ಕುಡಿಯುವ ನೀರಿಗೆ ಕೊರತೆ ಇಲ್ಲ. ಆದರೆ ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡಬೇಕು. ಆದ್ದರಿಂದ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ, ಕುಡಿಯಲು ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಿ ನೀಡಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವ ಕುಮಾರ್ ಅವರು ತಿಳಿಸಿದರು.

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯಿಂದ ಆದ ಪ್ರಾಣ ಹಾನಿ, ಜಾನುವಾರು, ಮನೆ ಹಾಗೂ ಬೆಳೆ ಹಾನಿಗಳಿಗೆ ಎನ್ ಡಿಆರ್ ಎಫ್ ಸೂಚನೆಗಳ ಪ್ರಕಾರ ಪರಿಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಕಂದಾಯ ಇಲಾಖೆಯ ಸೇವೆಗಳು ಸಕಾಲದಲ್ಲಿ ಜನರಿಗೆ ದೊರೆಯಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಿ ಎಸ್ ಆರ್ ಅನುದಾನವನ್ನು ಬಳಕೆ ಮಾಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಮಾಡಿದ್ದು ಇವರನ್ನು ಮರಳಿ ಶಾಲೆಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಡಿ ಡಿ ಪಿ ಐ ಅವರಿಗೆ ಸೂಚನೆ ನೀಡಿದರು.

ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದ ಅವರು ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗೆ ನಿಯಮಿತವಾಗಿ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳಿಗೆ ಸೂಚನೆ ನೀಡಿದರು.

ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಂಡು ಜಿಲ್ಲೆಯ ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ ಮೇವು ಕಿಟ್ ಗಳನ್ನು ವಿತರಣೆ ಮಾಡಿ ಮೇವು ಬೆಳವಣಿಗೆಗೆ ಉತ್ತೇಜನ ನೀಡುವಂತೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಶೇ 42 ರಷ್ಟು ಹೆಚ್ಚು ಮಳೆ ಆಗಿದೆ. ಕಬಿನಿ ಮತ್ತು ಕೆ ಆರ್ ಎಸ್ ನಿಂದ ಹೆಚ್ಚುವರಿ ನೀರು ಬಿಟ್ಟಿದ್ದರಿಂದ ಟಿ ನರಸಿಪುರ ಹಾಗೂ ನಂಜನಗೂಡು ತಾಲ್ಲೂಕಿನ ಕೆಲವು ಗ್ರಾಮಗಳ ಬೆಳೆಗಳು ನಾಶ ಆಗಿವೆ. ಇದಕ್ಕೆ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ 75 ಮನೆಗಳು ಮಳೆಯಿಂದ ಪೂರ್ಣ ಪ್ರಮಾಣದ ಹಾನಿ ಆಗಿದೆ. ಇದಕ್ಕೆ 1.20 ಲಕ್ಷ ಪರಿಹಾರ ನೀಡಲಾಗುತ್ತಿದೆ. 83 ಮನೆಗಳು ಬಾಗ ಶಹ ಹಾನಿ ಆಗಿದೆ ಇವಕ್ಕೆ 50 ಸಾವಿರ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಬಾಳೆ ಮತ್ತು ತಂಬಾಕು ಬೆಳೆ ಹೆಚ್ಚಿನ ಹಾನಿ ಆಗಿದೆ. ರೈತರ ಜಮೀನುಗಳಿಗೆ ಆಧಾರ್ ಸಿಡಿಂಗ್ ಕಾರ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿ ಶೇಕಡಾ 70 ರಷ್ಟು ಆಧಾರ್ ಸೀಡಿಂಗ್ ಆಗಿದೆ. ಉಳಿದ ಕಾರ್ಯ ಪ್ರಗತಿಯಲ್ಲಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಮಾತನಾಡಿ, ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಿ ಎಸ್ ಆರ್ ಅನುದಾನಕ್ಕೆ ಜಿಲ್ಲೆಯಲ್ಲಿರುವ ಕಂಪನಿಗಳ ಪ್ರತಿನಿಧಿಗಳ ಸಭೆ ನಡೆಸಲಾಗಿದೆ. ವಿವಿಧ ಶಾಲೆಗಳ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಆಗುತ್ತಿದ್ದು, ಇವುಗಳ ಗುಣಮಟ್ಟವನ್ನು ಸಂಬಂದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪ್ಥಿತರಿದ್ದರು.