ಮೈಸೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕುತ್ತಿರುವ ಕರೆಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆದರಿಕೆ ಹಾಕುವವರ ಮೇಲೆ ಕಠಿಣ ಕ್ರಮಕೈಗೊಳ್ಳದ ಹೊರತು, ಇಂತಹ ಪ್ರಕರಣಗಳು ನಿಲ್ಲುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಇದನ್ನು ಓದಿ: ಜೀವ ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ್ ಖರ್ಗೆ
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಬೇಕು ಎಂಬುದನ್ನು ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿ ಕ್ರಮಕೈಗೊಳ್ಳುತ್ತಾರೆ. ಸರ್ಕಾರ ಕೂಡ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುತ್ತಿದೆ ಎಂದು ತಿಳಿಸಿದರು.
ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ನಾನು ಆ ಬಗ್ಗೆ ನಿರ್ಧಾರಗಳನ್ನು ಹೇಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರೇ ತೀರ್ಮಾನ ಮಾಡಲಿದ್ದಾರೆ. ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿರುವುದನ್ನು ಪರಿಗಣಿಸಿದ್ದೇವೆ. ಯಾವ್ಯಾವ ನಂಬರ್‌ಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ. ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಬೆದರಿಕೆ ಹಾಕುವವರ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಇಂತಹ ಪ್ರಕರಣಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.





