ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಸರಗೂರು ತಾಲ್ಲೂಕಿನ ದೊಡ್ಡಬರಗಿ ಗ್ರಾಮದ ವೀರಭದ್ರೇಗೌಡ (60) ಮೃತಪಟ್ಟವರು. ವೀರಭದ್ರೇಗೌಡ ಅವರು ಇಂದು ಬೆಳಗ್ಗೆ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಲು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಕಾಡಗೆರೆ ಗ್ರಾಮದ ಸಮೀಪ ಏಕಾಏಕಿ ಎದುರಾದ ಕಾಡಾನೆಯೊಂದು ಅವರ ಮೇಲೆ ದಾಳಿ ನಡೆಸಿ ತುಳಿದು ಗಂಭೀರವಾಗಿ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ.
ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರೇಗೌಡ ಅವರನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಿಂದ ದೊಡ್ಡಬರಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಕಾಡಾನೆಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.




